ಉಡುಪಿ: ಉಡುಪಿ ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಿಢೀರ್ ದಾಳಿ ನಡೆಸಿ ವಿವಿಧ ವಿಭಾಗಗಳ ಕಡತಗಳು ಹಾಗೂ ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ.
ನಗರಸಭೆಯಲ್ಲಿ ಸಾರ್ವಜನಿಕರಿಂದ ಸಲ್ಲಿಸಲಾದ ಕೆಲವು ಅರ್ಜಿಗಳು ದೀರ್ಘಕಾಲದಿಂದ ವಿಲೇವಾರಿಯಾಗದೆ ಬಾಕಿ ಉಳಿದಿವೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ದಾಳಿಯ ವೇಳೆ ವಿವಿಧ ವಿಭಾಗಗಳ ಕಡತ ನಿರ್ವಹಣೆ, ಸಾರ್ವಜನಿಕ ಸೇವೆಗಳ ಅನುಷ್ಠಾನ, ಅರ್ಜಿಗಳ ವಿಲೇವಾರಿ ಸ್ಥಿತಿ ಸೇರಿದಂತೆ ಹಲವು ವಿಷಯಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
ಲೋಕಾಯುಕ್ತ ದಾಳಿಯಿಂದ ನಗರಸಭೆ ಕಚೇರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಪರಿಶೀಲನೆಗಾಗಿ ಒದಗಿಸಿದ್ದಾರೆ.
ಉಡುಪಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರಸಭೆಯ ಆಡಳಿತಾತ್ಮಕ ದಾಖಲೆಗಳು, ಬಾಕಿ ಉಳಿದಿರುವ ಅರ್ಜಿಗಳು ಹಾಗೂ ವಿವಿಧ ಕಡತಗಳ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲಿಸಿದ್ದಾರೆ.
ದಾಳಿಯ ವೇಳೆ ವಿವಿಧ ವಿಭಾಗಗಳ ಕಾರ್ಯವೈಖರಿ, ಕಡತಗಳ ನಿರ್ವಹಣೆ ಹಾಗೂ ಸಾರ್ವಜನಿಕ ಅರ್ಜಿಗಳ ವಿಲೇವಾರಿ ಸ್ಥಿತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್
ಕುಮಾರ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಹಾಲಮೂರ್ತಿ ರಾವ್ (ಉಡುಪಿ) ಹಾಗೂ ಡಿವೈಎಸ್‌ಪಿ ಸುರೇಶ್ ಕುಮಾರ್ (ಮಂಗಳೂರು) ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಾಜೇಂದ್ರ ನಾಯ್ಕ್, ಚಂದ್ರಶೇಖರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.







