ಕುಂದಾಪುರ: ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ರಾಜಕೀಯ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಅವರು ವಯೋಸಹಜ ಅಸೌಖ್ಯದಿಂದ ನಿಧನರಾದರು.
ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆಯವರು 1960 – 83 ರ ವರೆಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದರು. 1983 -1994 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.



