ಚಿಕ್ಕಬಳ್ಳಾಪುರ: ಇಲ್ಲಿನ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರ ಭಾಷಣಕ್ಕೆ ಅಡ್ಡಿಪಡಿಸಿ, ತೀವ್ರ ಗದ್ದಲ ಎಬ್ಬಿಸಿ ಚಪ್ಪಲಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ.
ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕುಶಾಲ್ ಚೌಕ್ಸಿ ಅವರು, ಪ್ರಮುಖ ನಾಲ್ಕು ಜನರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ನಡೆದ ಗದ್ದಲ ಮತ್ತು ಕಾನೂನು ಸುವ್ಯವಸ್ಥೆ ಭಂಗ ತಂದ ಘಟನೆಯಲ್ಲಿ ಸುಮಾರು 100 ರಿಂದ 150ಕ್ಕೂ ಹೆಚ್ಚು ವ್ಯಕ್ತಿಗಳು ಭಾಗಿಯಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕಾರ್ಯಕ್ರಮದ ವಿಡಿಯೋ ತುಣುಕುಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಆಧಾರವಾಗಿಟ್ಟುಕೊಂಡು, ಉಳಿದ ಎಲ್ಲ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
ಇದು ಉದ್ದೇಶಪೂರ್ವಕವಾಗಿ ಶಾಸಕರಿಗೆ ಅವಮಾನ ಮಾಡುವ ನಿಟ್ಟಿನಲ್ಲಿ ನಡೆದ ಸಂಚಾಗಿದೆ. ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಸ್ಪಿ ಕುಶಾಲ್ ಚೌಕ್ಸಿ ಹೇಳಿದ್ದಾರೆ.
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮುದಾಯ ಸೇರಿದಂತೆ ವಿವಿಧ ಜಾತಿ-ಸಮುದಾಯದ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಆದರೆ, ಶಾಂತಿಯುತ ಸಭೆಯಲ್ಲಿ ಗದ್ದಲ ಸೃಷ್ಟಿಸಿದವರು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷದ ಕಾರ್ಯಕರ್ತರೇ ಅಥವಾ ಪೂರ್ವ ನಿಯೋಜಿತವಾಗಿ ಬಂದಿದ್ದ ಸಮಾಜವಿರೋಧಿ ಶಕ್ತಿಗಳೇ ಎಂಬ ನಿಟ್ಟಿನಲ್ಲಿ ತನಿಖೆಯನ್ನು ತೀವ್ರಗೊಳಿಸಲಾಗಿದೆ.
ಇದೇ ಸಂದರ್ಭದಲ್ಲಿ ಇಲಾಖೆಯ ಮೇಲಿನ ಭದ್ರತಾ ಲೋಪದ ಆರೋಪಗಳನ್ನು ಎಸ್ಪಿ ಕುಶಾಲ್ ಚೌಕ್ಸಿ ಅವರು ಕಡಾಖಂಡಿತವಾಗಿ ತಳ್ಳಿಹಾಕಿದ್ದಾರೆ. ಕಾರ್ಯಕ್ರಮದ ಗಾಂಭೀರ್ಯತೆಯನ್ನು ಅರಿತು ಪೊಲೀಸ್ ಇಲಾಖೆಯಿಂದ ಸಮರ್ಪಕ ಹಾಗೂ ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಇದರಲ್ಲಿ ಪೊಲೀಸರ ಯಾವುದೇ ವೈಫಲ್ಯ ಇರಲಿಲ್ಲ. ಇದೊಂದು ವ್ಯವಸ್ಥಿತ ಅಪರಾಧ ಕೃತ್ಯವಾಗಿದ್ದು, ಶೀಘ್ರದಲ್ಲೇ ಸಂಪೂರ್ಣ ಸತ್ಯಾಸತ್ಯತೆ ಹೊರಬರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆಯನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ.




