ಮಂಗಳೂರು: ನಗರದ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ತಾವರದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಜುಲೈ 2ರಂದು ತಡರಾತ್ರಿ ಸುಮಾರು 12.30 ಗಂಟೆಗೆ ಎಎಸ್‌ಐ ಗಣೇಶ್ ಕುಮಾರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಶಿವಾನಂದ ಅವರು ಅತ್ತಾವರ ಪ್ರದೇಶದಲ್ಲಿ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ, ಅತ್ತಾವರಕಟ್ಟೆ ಬಳಿ ಇಬ್ಬರು ಮಾದಕ ವಸ್ತು ಸೇವಿಸಿರುವ ಬಗ್ಗೆ ಮಾಹಿತಿ ದೊರಕಿತು. ಸ್ಥಳಕ್ಕೆ ತೆರಳಿದ ಪೊಲೀಸರು, ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ವಿಚಾರಣೆಯಲ್ಲಿ ಅವರು ಕುಡ್ರೋಳಿ ನಿವಾಸಿ 26 ವರ್ಷದ ಮೊಹಮ್ಮದ್ ಫರ್ಡೀನ್ ಹಾಗೂ ಸುರತ್ಕಲ್ ಕೃಷ್ಣಾಪುರ ನಿವಾಸಿ 27 ವರ್ಷದ ಅಮೀರ್ ಎಂದು ಗುರುತಿಸಲಾಯಿತು. ಇವರ ವರ್ತನೆ ಮತ್ತು ಬಾಯಿಯಿಂದ ಅಮಲು ಪದಾರ್ಥದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾರೆ.
ಬಳಿಕ ಇಬ್ಬರನ್ನೂ ವೈದ್ಯಕೀಯ ಪರೀಕ್ಷೆಗೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಮೊಹಮ್ಮದ್ ಫರ್ಡೀನ್ ಮೆಥಾಂಫೆಟಮೈನ್ (Methamphetamine) ಹಾಗೂ ಅಮೀರ್ ಟೆಟ್ರಾಹೈಡ್ರೋಕ್ಯಾನಾಬಿನಾಯ್ಡ್ (Tetrahydrocannabinoid – THC) ಸೇವಿಸಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.




