ಅಂಕೋಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ವರದರಾಜ್ ಹೋಟೆಲ್ ಸಮೀಪ ಶನಿವಾರ ಸಂಭವಿಸಿದೆ.
ಕಾರವಾರದಿಂದ ಉಡುಪಿ ಕಡೆಗೆ ಸಚಿವರನ್ನು ಎಸ್ಕಾರ್ಟ್ ಮಾಡಿಕೊಂಡು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಸಚಿವ ಯು.ಟಿ. ಖಾದರ್ ಅವರು ಮಾನವೀಯತೆ ಮೆರೆದಿದ್ದು, ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಂಡು ಚಿಕಿತ್ಸೆಗೆ ಸ್ಪಂದಿಸಿದ್ದಾರೆ.
ಅಪಘಾತದಲ್ಲಿ ಅಂಕೋಲ ತಾಲೂಕಿನ ಅಲಗೇರಿ ಗ್ರಾಮದ ನಿವಾಸಿ ಸಂದೀಪ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಅಂಕೋಲ ಪಟ್ಟಣದ ಆರ್ಯ ಮೆಡಿಕಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ತಲೆಗೆ ಪೆಟ್ಟಾಗಿದ್ದರೂ ಜೀವಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





