ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಕುಮಾರಧಾರಾ ನದಿಯ ನೀರಿನ ಮಟ್ಟಗಣನೀಯ ಏರಿಕೆಯಾಗಿದೆ.
ಕೆಸರುಮಿಶ್ರಿತ ನೀರಿನೊಂದಿಗೆ ಮರದ ದಿಮ್ಮಿಗಳು ಹಾಗೂ ತೇಲಿಬಂದ ಕಸ-ಕಡ್ಡಿಗಳು ಅಣೆಕಟ್ಟಿಗೆ ಬಂದು ಸೇರಿವೆ. ನದಿಯ ನೀರಿನ ಪ್ರಮಾಣ ಹೆಚ್ಚಿದ ಪರಿಣಾಮ ಸ್ನಾನಘಟ್ಟ ಮುಳುಗಡೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ನದಿಗೆ ಇಳಿಯದಂತೆ ಎಚ್ಚರಿಕೆ ವಹಿಸಲಾಗಿದೆ.
ಇನ್ನೊಂದೆಡೆ, ಬಿರುಗಾಳಿ ಸಹಿತ ಮಳೆಯ ಪರಿಣಾಮ ಹಲವೆಡೆ ವಿದ್ಯುತ್ ಕಂಬಗಳು ಹಾಗೂ ಮರಗಳು ನೆಲಕ್ಕುರುಳಿದ್ದು, ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಕೆಲವೆಡೆ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ವಿದ್ಯುತ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಿಬ್ಬಂದಿ ಮರಗಳನ್ನು ತೆರವುಗೊಳಿಸಿ ವಿದ್ಯುತ್ ಸಂಪರ್ಕ ಪುನಃಸ್ಥಾಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.





