ಬೆಂಗಳೂರು: ನಗರದ ಕೆಆರ್ ಪುರಂ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ, ಕಳವಾಗಿದ್ದ ಬರೋಬ್ಬರಿ 70 ಲಕ್ಷ ರೂಪಾಯಿ ಮೌಲ್ಯದ 500 ಗ್ರಾಂ ಚಿನ್ನಾಭರಣ ಹಾಗೂ 1.5 ಕೆ.ಜಿ. ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಒಟ್ಟು 17 ಮನೆಗಳ ಕಳ್ಳತನ ಮಾಡಿದ್ದ ಆರೋಪಿ ಮೊಹಮ್ಮದ್ ಇಸ್ರಾರ್ ಎಂಬಾತನನ್ನು ಮಾಲು ಸಮೇತ ಬಂಧಿಸಿದ್ದಾರೆ.
ಬಂಧಿತ ಆರೋಪಿ ತಡರಾತ್ರಿ ಮನೆಗಳ್ಳತನ ಮಾಡುತ್ತಿದ್ದ. ಗುರುತು ಪತ್ತೆಯಾಗದಂತೆ ತಡೆಯಲು ಹಲವು ಚಾಣಾಕ್ಷ ತಂತ್ರಗಳನ್ನು ಅನುಸರಿಸುತ್ತಿದ್ದ. ಕಳ್ಳತನ ಮಾಡುವ ಮುನ್ನ ಮತ್ತು ನಂತರ ಬಟ್ಟೆಗಳನ್ನು ಬದಲಾಯಿಸುತ್ತಿದ್ದ. ಅಷ್ಟೇ ಅಲ್ಲದೆ, ಕೃತ್ಯ ಎಸಗಿದ ಮೇಲೆ ತನ್ನ ಬೈಕ್‌ನ ನಂಬರ್ ಪ್ಲೇಟ್ ಅನ್ನು ಕೂಡ ಬದಲಾಯಿಸಿ ಪೊಲೀಸರ ಕಣ್ಣು ತಪ್ಪಿಸಿಕೊಳ್ಳುತ್ತಿದ್ದ ಎಂಬುದು ತಿಳಿದುಬಂದಿದೆ.
ಕಳೆದ ಮೂರು ವರ್ಷಗಳಿಂದ ಈ ಕಳ್ಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ. ಆದರೆ, ಕೆ.ಆರ್. ಪುರಂ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಕೊನೆಗೂ ಮೊಹಮ್ಮದ್ ಇಸ್ರಾರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ



