ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ.
ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಆರೋಪಿ ಯುವಕನನ್ನು ಯುವತಿಯ ದೂರದ ಸಂಬಂಧಿ ಬೆಳ್ತಂಗಡಿ ತಾಲೂಕಿನ ಒಡಿಲ್ನಾಳ ಗ್ರಾಮದ ನಿವಾಸಿ ಪುರುಷೋತ್ತಮ ಗೌಡ ಎಂಬವರ ಪುತ್ರ ಚೇತನ್ ಎಂದು ಗುರುತಿಸಲಾಗಿದೆ.
ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.
ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ನಿರೀಕ್ಷಕ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ಬಗ್ಗೆ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.








