Home Crime 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್…!!

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್…!!

ಉಡುಪಿ : 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

2002ರ ಸೆಪ್ಟೆಂಬರ್ 7ರಂದು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಲಾರಿ ಚಲಾಯಿಸಿದ ಚಾಲಕ ವಿಲಾಸ್ ಶಿಂಧೆ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ.

ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯ ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗೆ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ ₹1,000 ದಂಡ ವಿಧಿಸಿತ್ತು.

ಆದರೆ ತೀರ್ಪಿನ ಬಳಿಕ ಆರೋಪಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಎಲ್‌ಪಿಸಿ (LPC) ವಾರಂಟ್ ಹೊರಡಿಸಿತ್ತು.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್. ನಾಯಕ್, ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ಪಡುಬಿದ್ರಿ ಠಾಣೆಯ ಪಿ ಎಸ್ ಐ ಶಕ್ತಿವೇಲು ಮತ್ತು ಸಿಬ್ಬಂದಿಗಳು ಮಹಾರಾಷ್ಟ್ರದ ಪುಣೆಯಲ್ಲಿ ಆರೋಪಿ ಲಾರಿ ಚಾಲಕನ ಬಗ್ಗೆ ಮಾಹಿತಿ ಕಲೆಹಾಕಿದರು.

ಅಲ್ಲಿಗೆ ತೆರಳಿದ ಪೊಲೀಸ್ ತಂಡ, ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವಿಲಾಸ್ ಶಿಂಧೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

23 ವರ್ಷಗಳ ಬಳಿಕ ಪ್ರಕರಣವನ್ನು ಬೆನ್ನತ್ತಿ ಆರೋಪಿಯನ್ನು ಬಂಧಿಸಿದ ಪಡುಬಿದ್ರಿ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.