ಬಳ್ಳಾರಿ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಉದ್ಯಮಿ ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಡರಾತ್ರಿ ಸಂಭವಿಸಿದೆ.
ತಿರುಪತಿಯಿಂದ ಮಂತ್ರಾಲಯಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಾತ್ರಿ ಸುಮಾರು 2.30 ಗಂಟೆಗೆ ಆಂಧ್ರಪ್ರದೇಶದ ಎಮ್ಮಿಗನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮಂಗಳೂರು ಮೂಲದ ಉದ್ಯಮಿ ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಮಂತ್ರಾಲಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.




