Home Latest ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಖಂಡನೀಯ – ನವೀನ್...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಖಂಡನೀಯ – ನವೀನ್ ಸಾಲಿಯಾನ್…!!

ಉಡುಪಿ : ನೀಟ್ ವಿಚಾರದಲ್ಲಿ ಭವಿಷ್ಯದ ಕನಸುಗಳನ್ನು ಹೊತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಾಗೂ ಬಾಡಿಗೆ ಗೂಂಡಾಗಳ ಮೂಲಕ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲಿಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ನಡುವೆ ಕೋಮು ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆದ ಶಾಸಕ ಯಶಪಾಲ್ ಸುವರ್ಣ ಅವರು, ಇದೀಗ ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ವಿಚಾರದಲ್ಲಿ ಮೌನವಾಗಿದ್ದಾರೆ. ವಿದ್ಯಾರ್ಥಿಗಳ ಬಗ್ಗೆ ನಿಜವಾದ ಕಾಳಜಿ ಇದ್ದರೆ, ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಹಾಗೂ ಕೇಂದ್ರ ಸರ್ಕಾರದ ವಿದ್ಯಾರ್ಥಿ ವಿರೋಧಿ ಕ್ರಮಗಳನ್ನು ಬಹಿರಂಗವಾಗಿ ಖಂಡಿಸಬೇಕು. ಧರ್ಮದ ಹೆಸರಿನ ರಾಜಕಾರಣ ಬಿಟ್ಟು ವಿದ್ಯಾರ್ಥಿಗಳ ಭವಿಷ್ಯದ ಪರವಾಗಿ ನಿಲ್ಲಬೇಕು. ದೇಶಕ್ಕಾಗಿ ತ್ಯಾಗ ಮಾಡಿದ ನೆಹರು-ಗಾಂಧಿ ಕುಟುಂಬದ ರಾಹುಲ್ ಗಾಂಧಿಯವರಿಗೆ ಎಷ್ಟೇ ತೊಂದರೆ ನೀಡಿದರೂ ಅವರು ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತುತ್ತಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೀಟ್ ವ್ಯವಸ್ಥೆಯಿಂದ ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಉಡುಪಿ ಜಿಲ್ಲಾ ಯುವ ಯುವ ಕಾಂಗ್ರೆಸ್ ಮುಖಂಡ, ಈ ಬೆಳವಣಿಗೆ ಭವಿಷ್ಯದ ಭಾರತದ ಮೇಲೆ ನಡೆದಿರುವ ಅವಮಾನಕಾರಿ ಕೃತ್ಯವಾಗಿದೆ. ಈ ವಿಚಾರವನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿಯವರು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಕೇಂದ್ರ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನ ಮುರಿದು ದೇಶದ ಜನತೆಗೆ ಸ್ಪಷ್ಟನೆ ನೀಡಬೇಕು. ಈ ವಿಚಾರದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದನ್ನು ದೇಶದ ಜನತೆ ಗಮನಿಸುತ್ತಿದ್ದಾರೆ ಎಂದು ನವೀನ್ ಸಾಲಿಯಾನ್ ಹೇಳಿದರು.