ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಸಾಗರ್ CL-7 ಬಾರ್ & ರೆಸ್ಟೋರೆಂಟ್ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿಗಳಿಗೆ ಹುಕ್ಕಾ ಸೇವನೆಗೆ ಅವಕಾಶ ನೀಡುವುದು ಹಾಗೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ, ಉಡುಪಿ ಎರಡನೇ ಎ.ಸಿ.ಜೆ. ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಅನುಮತಿ ಪಡೆದು ದಾಳಿ ನಡೆಸಲಾಗಿದೆ.
ಪರಿಶೀಲನೆ ವೇಳೆ ಬಾರ್‌ನಲ್ಲಿ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಯುವಕರು ಹಾಗೂ 2 ಯುವತಿಯರು, ಒಟ್ಟು 14 ಮಂದಿ ಪತ್ತೆಯಾಗಿದ್ದಾರೆ. ಅಲ್ಲದೆ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಪ್ರವೇಶ ನಿಷೇಧಿಸಿರುವ ಬಗ್ಗೆ ಯಾವುದೇ ಸೂಚನಾ ಫಲಕ ಇಲ್ಲ ಎಂದು ಬಾರ್ ಮ್ಯಾನೇಜರ್ ತಿಳಿಸಿದ್ದಾರೆ.
ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 115/2026 ದಾಖಲಿಸಲಾಗಿದ್ದು, ಕರ್ನಾಟಕ ಅಬಕಾರಿ ಅಧಿನಿಯಮ, 1967ರ ಕಲಂ 36(1)(b) ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




