ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ವತಿಯಿಂದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಉಡುಪಿ ಜಿಲ್ಲೆಯಲ್ಲಿ ಭಾನುವಾರ (ಆ.2) 6 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಸುಗಮವಾಗಿ ನಡೆಯಿತು.
ಪರೀೆಗೆ ಒಟ್ಟು 2,367 ಅಭ್ಯರ್ಥಿಗಳು ನೋಂದಣಿ ಮಾಡಿದ್ದು, 2,034 ಜನರು ಹಾಜರಾಗಿದ್ದು, 333 ಮಂದಿ ಗೈರಾಗಿದ್ದರು. ಬೆಳಗ್ಗೆ 10:30ರಿಂದ ಮಧ್ಯಾಹ್ನ 12ರ ವರೆಗೆ ಪರೀಕ್ಷೆ ನಡೆಯಿತು.
ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ವಿದ್ಯೋದಯ ಪಿಯು ಕಾಲೇಜ್, ಎಂಜಿಎಂ ಪಿಯು ಕಾಲೇಜ್, ಸರ್ಕಾರಿ ಬಾಲಕಿಯರ ಪ.ಪೂ. ಕಾಲೇಜು ಮತ್ತು ಪ್ರೌಢಶಾಲೆ ವಿಭಾಗ, ಸರ್ಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್) ಉಡುಪಿಯಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು.
ಇದು ಸ್ಪರ್ಧಾತ್ಮಕ ಪರೀಕ್ಷೆಯಾಗಿದ್ದರಿಂದ ಯಾವುದೇ ಅಕ್ರಮಗಳಿಗೆ ಆಸ್ಪದ ನೀಡದೆ, ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಜಿಲ್ಲಾಧಿಕಾರಿ ಅಧ್ಯಕ್ಷತೆ ಹಾಗೂ ನೇತೃತ್ವದಲ್ಲಿ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿತ್ತು. ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕಾದ ವಸ್ತ್ರ ಸಂಹಿತೆ, ರೀತಿ-ನಿಯಮ ಕುರಿತು ಉಡುಪಿ ಜಿಲ್ಲಾಡಳಿತ ಮಾರ್ಗಸೂಚಿಯ ಪಟ್ಟಿಯನ್ನೂ ಬಿಡುಗಡೆ ಮಾಡಿತ್ತು. ಎಲ್ಲ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಬಿಗಿ ಪೊಲೀಸ್ ಕಾವಲು ಹಾಕಲಾಗಿತ್ತು.
ಜಿಲ್ಲಾಡಳಿತದ ಮಾರ್ಗದರ್ಶನದಂತೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು ಎಂದು ಡಿಡಿಪಿಯು ರವೀಂದ್ರ ಉಪಾಧ್ಯಾಯ ತಿಳಿಸಿದ್ದಾರೆ.
ಪರೀಕ್ಷಾ ಆರಂಭಕ್ಕೂ ಮೊದಲು ಉಡುಪಿಯಲ್ಲಿರುವ 6 ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು. ಯಾವುದೇ ಅಕ್ರಮ ನಡೆಯದಂತೆ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಕೇಂದ್ರದಲ್ಲಿ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಸೂಚಿಸಿದರು.
ಉಡುಪಿಯಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಕಾಲಕ್ಕೆ ಹಾಜರಾಗುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ದೂರದ ಊರುಗಳ ಅಗತ್ಯ ಅಭ್ಯರ್ಥಿಗಳಿಗೆ ಶನಿವಾರ ರಾತ್ರಿ ಉಡುಪಿಯಲ್ಲಿ ಉಚಿತ ವಸತಿ ವ್ಯವಸ್ಥೆ ಮಾಡಲಾಗಿತ್ತು. ಉಡುಪಿ ಮಠದ ಪಾರ್ಕಿಂಗ್ ಯಾರ್ಡ್ ಸಮೀಪದ ಮಥುರಾ ಕಂಫರ್ಟ್ಸ್ ಹಾಗೂ ಅಂಬಲಪಾಡಿಯಲ್ಲಿರುವ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಅನೇಕ ವಿದ್ಯಾರ್ಥಿಗಳು ಅನುಕೂಲ ಪಡೆದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 3,395 ಹುದ್ದೆ ಹಾಗೂ ಸ್ಥಳೀಯ ವೃಂದದ 196 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಉಡುಪಿಯ 6 ಕೇಂದ್ರಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ಲಿಖಿತ ಪರೀಕ್ಷೆ ನಡೆದಿದೆ. ಎಲ್ಲ ಕೇಂದ್ರಗಳಿಗೂ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದು ಯಾವುದೇ ಅಕ್ರಮ, ನಕಲು ಅಥವಾ ಡಿಬಾರ್ ಪ್ರಕರಣ ನಡೆದಿಲ್ಲ. ಯಾವುದೇ ಅವ್ಯವಹಾರ ನಡೆಯದಂತೆ ತಡೆಯಲು ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿತ್ತು. — ಸ್ವರೂಪಾ ಟಿ.ಕೆ. ಉಡುಪಿ ಜಿಲ್ಲಾಧಿಕಾರಿ.




