Home Crime ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು…!!

ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು…!!

ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಶ್ರೀರಾಜ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರ ಸಂಜೆ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಆನಂದ್ ಎಂ. ಅವರು ಸಿಬ್ಬಂದಿಯೊಂದಿಗೆ ಕುವೆಟ್ಟು ಗ್ರಾಮದ ಪೊಟ್ಟುಕೆರೆ ಪ್ರದೇಶದಲ್ಲಿ ನಿಯಮಿತ ಗಸ್ತು ನಡೆಸುತ್ತಿದ್ದರು. ಈ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಹಾಗೂ ಮಾದಕ ವಸ್ತುವಿನ ಅಮಲಿನಲ್ಲಿರುವಂತೆ ಕಂಡುಬಂದ ವ್ಯಕ್ತಿಯನ್ನು ಪೊಲೀಸರು ತಡೆದು ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಆತ ಸಮರ್ಪಕ ಉತ್ತರ ನೀಡದೆ ಅಮಲಿನ ಸ್ಥಿತಿಯಲ್ಲೇ ಮಾತನಾಡುತ್ತಿದ್ದ ಎನ್ನಲಾಗಿದೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಿದಾಗ, ನಿಷೇಧಿತ ಮಾದಕ ವಸ್ತುವನ್ನು ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.

ವೈದ್ಯಕೀಯ ವರದಿಯ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸರು ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 27(ಬಿ) ಹಾಗೂ 22(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.