ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಬನ್ನಂಜೆ ನಾರಾಯಣ ಗುರು ಮಂದಿರದ ಸಮೀಪ ಹೆದ್ದಾರಿಯ ಕಾಂಕ್ರೀಟ್ ಬಿರುಕುಬಿಟ್ಟು, ಗುಂಡಿಯಾಗಿ ಮಾರ್ಪಟ್ಟಿದ್ದು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಕಾಂಕ್ರೀಟ್ ಒಳಗಿನ ಕಬ್ಬಿಣದ ಕಂಬಿಗಳು ಮೇಲಕ್ಕೆ ಬಂದಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಅಪಘಾತದ ಭೀತಿ ಎದುರಾಗಿದೆ. ಈಗಾಗಲೇ ಈ ಸ್ಥಳದಲ್ಲಿ ಅಪಘಾತಗಳು ಸಂಭವಿಸಿರುವ ಬಗ್ಗೆ ಸ್ಥಳೀಯರು ದೂರು ನೀಡುತ್ತಿದ್ದಾರೆ.
ಹೆಚ್ಚಿನ ವಾಹನ ದಟ್ಟಣೆ ಇರುವ ಈ ರಸ್ತೆಯಲ್ಲಿನ ಸಮಸ್ಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ತಕ್ಷಣವೇ ದುರಸ್ತಿಪಡಿಸಿ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.






