ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್. ಎಂಬಾತನನ್ನು ಎನ್‌ಐಎ ತಂಡ ಬಂಧಿಸಿದೆ ಎಂದು ತಿಳಿದು ಬಂದಿದೆ.
ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳ ತಂಡ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕೇರಳದ ಕೊಚ್ಚಿಯಲ್ಲಿ ಉಮರ್ ಫಾರೂಕ್‌ನನ್ನು ವಶಕ್ಕೆ ಪಡೆಯಲಾಗಿದೆ. ಈತನ ಬಂಧನದೊಂದಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದ ಆರೋಪಿಗಳ ಒಟ್ಟು ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ ಉಮರ್ ಫಾರೂಕ್ ವಿರುದ್ಧ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ (RCN) ಹಾಗೂ ನ್ಯಾಯಾಲಯದಿಂದ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಈತನ ಬಂಧನಕ್ಕೆ ನೆರವಾಗುವ ಸುಳಿವು ನೀಡಿದವರಿಗೆ ಎನ್‌ಐಎ 2 ಲಕ್ಷ ರೂಪಾಯಿ ಬಹುಮಾನವನ್ನು ಕೂಡ ಘೋಷಿಸಿತ್ತು.
ನಿಷೇಧಿತ ಪಿಎಫ್ಐ ಸಂಘಟನೆಯ ಸುಳ್ಯ ಕಚೇರಿಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯ ಸಂಚು ಸಭೆಯಲ್ಲಿ ಉಮರ್ ಫಾರೂಕ್ ಇತರ ಆರೋಪಿಗಳೊಂದಿಗೆ ಸಕ್ರಿಯವಾಗಿ ಭಾಗವಹಿಸಿದ್ದು, ಹತ್ಯೆಗೂ ಮುನ್ನ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ಅವರ ಚಲನವಲನ ಗಮನಿಸಲು, ದಾಳಿ ನಡೆಸುವ ಸ್ಥಳ ಗುರುತಿಸಲು ಸಹ ಆರೋಪಿಯೊಬ್ಬನಿಗೆ ಈತ ತನ್ನ ಬೈಕ್ ನೀಡಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ, ಈ ಪ್ರಕರಣದ ಸಾಕ್ಷಿದಾರನ ಮೇಲೆ ಕೊಲೆ ಯತ್ನ ನಡೆಸಿದ ಸಚ ಸಂಚಿನಲ್ಲೂ ಈತ ಭಾಗಿಯಾಗಿದ್ದ ಎಂಬ ಗಂಭೀರ ಆರೋಪವಿದೆ.
ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನು ಇಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆ ಹಚ್ಚಿ ಬಂಧಿಸಲು ತನಿಖಾ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.




