ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಸಮೀಪ ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಹೊಸ ವರ್ಷದ ದಿನವೇ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಶಬ್ಬೀರ್ (55), ತಿಮ್ಮಣ್ಣ (53) ಮತ್ತು ಸಂಜಯ್ (45) ಎಂದು ತಿಳಿಯಲಾಗಿದೆ. ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತ ನಡೆದಿದೆ.
ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ. ಘಟನೆ ವೇಳೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಹಾಸನ ಮೂಲದ ನೌಶದ್ ಎಂಬುವವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಕಡೂರು ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ.
ಮೃತರನ್ನು ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇನ್ನು ತಿಮ್ಮಣ್ಣ ಮತ್ತು ಸಂಜಯ್ ಮೃತದೇಹವನ್ನು ಕಡೂರು ಸರ್ಕಾರಿ ಆಸ್ಪತ್ರೆ, ಶಬ್ಬೀರ್ ಮೃತದೇಹವನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ನೂತನ ಎಸ್ಪಿ ಶುಭಾನ್ವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



