ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಸ್ವರ್ಣ ನದಿಯಲ್ಲಿ ಅಕ್ರಮ ಮರಳು ದಂಧೆಕೋರರ ವಿರುದ್ಧ ಸಮರ ಸಾರಿರುವ ಬ್ರಹ್ಮಾವರ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ಸ್ವರ್ಣಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ 17 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬ್ರಹ್ಮಾವರ ತಾಲೂಕಿನ ಐರೋಡಿ ಗ್ರಾಮದ ಸ್ವರ್ಣಾ ನದಿ ತೀರದಲ್ಲಿ ಯಾವುದೇ ಪರವಾನಗಿ ಇಲ್ಲದೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳು ಅಡ್ಡೆಗಳ ಮೇಲೆ ದಾಳಿ ಮಾಡಿದ
ಮರಳು ಸಾಗಾಟ ಮತ್ತು ಗಣಿಗಾರಿಕೆಗೆ ಬಳಸುತ್ತಿದ್ದ ದೋಣಿಗಳನ್ನು ಜಪ್ತಿ ಮಾಡಲಾಗಿದೆ. ಅಕ್ರಮವಾಗಿ ಶೇಖರಿಸಿಟ್ಟಿದ್ದ ಭಾರಿ ಪ್ರಮಾಣದ ಮರಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆಯಂತೆ, ಬ್ರಹ್ಮಾವರ ವೃತ್ತ ನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಅಕ್ರಮ ದಂಧೆಗೆ ಬ್ರೇಕ್ ಹಾಕಿದ ಪೊಲೀಸ್ ಅಧಿಕಾರಿಗಳ ಕಾರ್ಯದಕ್ಷತೆಗೆ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.
ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿರುವವರ ಪತ್ತೆಗಾಗಿ ತನಿಖೆ ಚುರುಕುಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಮಾಹಿತಿ ಆಧಾರದಲ್ಲಿ ಪೊಲೀಸರು ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಹಾವಂಜೆ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದಲ್ಲಿದ್ದ ಅಕ್ರಮ ಮರಳುಗಾರಿಕೆಗೆ ಉಪಯೋಗಿಸಿದ 17 ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡರು
ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಈ ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಭಾಗವಹಿಸಿದ್ದು ತನಿಖೆ ಮುಂದುವರೆದಿದೆ.




