ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ಸಂದೀಪ್ ರಾಜ್ (28) ಮೃತ ವಿದ್ಯಾರ್ಥಿ.
ಅವರು ಸಿಮ್ಸ್‌ನಲ್ಲಿ ಎಂಡಿ ರೇಡಿಯಾಲಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಭದ್ರಾ ವಸತಿ ಗೃಹದ ಮೂರನೇ ಮಹಡಿಯಲ್ಲಿರುವ ತಮ್ಮ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಸಂಜೆ ವೇಳೆ ಸಹಪಾಠಿಗಳಿಗೆ ಅನುಮಾನ ಉಂಟಾಗಿ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ.
ಸಂದೀಪ್ ರಾಜ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಹಾಗೂ ಚಿಕಿತ್ಸೆ ಕೂಡ ಪಡೆದುಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.
ಆದರೆ ಇವರ ಆತ್ಮಹತ್ಯೆಗೆ ನಿಖರ ಕಾರಣಗಳು ಇನ್ನೂ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



