ತುಮಕೂರು: ತುಮಕೂರು ತಾಲೂಕು ಕೋರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ಕು ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ದುರ್ಮರಣ ಹೊಂದಿದ್ದಾರೆ. ಬೆಳಗಿನ ಜಾವ 4.45ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿಯಲಾಗಿದೆ.
ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಬೆಳಗ್ಗಿನ ಜಾವ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಂತಿದ್ದ ಲಾರಿಯನ್ನು ಗಮನಿಸದೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರೆಲ್ಲಾ ಕೊಪ್ಪಳ ಮೂಲದವರಾಗಿದ್ದಾರೆ. ಇವರು ಶಬರಿಮಲೆಯಿಂದ ತಮ್ಮೂರಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಈ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



