ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕೋಡಿ ನಿವಾಸಿ ಉಮೇಶ್ ಶೆಟ್ಟಿ (47) ಎಂಬಾತನನ್ನು ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು POCSO ಕಾಯ್ದೆಯಡಿ ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪದ ಕುರಿತು ದೂರು ದಾಖಲಾಗಿತ್ತು. ಆರೋಪಿ ಈ ಹಿಂದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಕೆಲಸ ಮಾಡಿದ್ದು, ಬಳಿಕ ಕೃಷಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಇದೀಗ ವಿಟ್ಲ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸರ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
ಅಪ್ರಾಪ್ತರ ಮೇಲಿನ ಯಾವುದೇ ರೀತಿಯ ದೌರ್ಜನ್ಯ ಕಂಡುಬಂದಲ್ಲಿ ಕೂಡಲೇ ಪೊಲೀಸ್ ಠಾಣೆ ಅಥವಾ 1098 ಚೈಲ್ಡ್ ಹೆಲ್ಪ್‌ಲೈನ್‌ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.




