Home Karnataka News ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ನಿಧನ…!!

ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ನಿಧನ…!!

ಬೆಂಗಳೂರು: ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಂಗಳೂರಿನಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ.

ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು ಎನ್ನಲಾಗಿದೆ. ಇಂದು ಸ್ವಕ್ಷೇತ್ರ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಿಪಟೂರು ಕ್ಷೇತ್ರದಿಂದ 2008 ಮತ್ತು 2018 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್, ಬೊಮ್ಮಾಯಿ ಸಂಪುಟದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತಮ್ಮ ಆಡಳಿತಾವಧಿಯಲ್ಲಿ ಹಲವು ಪ್ರಮುಖ ಹಾಗೂ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದರು. ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಮತ್ತು ಶಿಸ್ತು ಪಾಲನೆ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಗಮನ ಸೆಳೆದಿದ್ದರು. ಶಾಲಾ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾ ಪ್ರಾರ್ಥನೆ ಮತ್ತು ಕಲಿಕೆಯ ವಾತಾವರಣ ಸುಧಾರಣೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು.

ಬಿ.ಇ. ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ತಮ್ಮ ರಾಜಕೀಯ ಜೀವನವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪೂರ್ಣಕಾಲಿಕ ಕಾರ್ಯಕರ್ತರಾಗಿ ಪ್ರಾರಂಭಿಸಿದ್ದರು. ಮೃತರು ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.