ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ವಿದ್ಯಾರ್ಥಿ ಚಿರಾಗ್ ಎ.ಎಂ. ಅವರು ಕಾಲೇಜಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ತಿಪಟೂರು ಮೂಲದ ಎ.ಆರ್. ಮಂಜುನಾಥ್ ಅವರ ಪುತ್ರ ಚಿರಾಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು.
ಆಗಸ್ಟ್ 21ರಂದು ಬೆಳಿಗ್ಗೆ 7.30ರ ಸುಮಾರಿಗೆ ಕಾಲೇಜಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ತಕ್ಷಣ ಕಾರ್ಕಳ ಟಿ.ಎಂ.ಎ ಪೈ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಿಗ್ಗೆ 11.30ರ ಸುಮಾರಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು.
ವೈದ್ಯರು ಪರೀಕ್ಷಿಸಿದಾಗ ಚಿರಾಗ್ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




