ಕಾರ್ಕಳ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಆಗಸ್ಟ್ 21ರಂದು ಬೆಳಿಗ್ಗೆ ಮುಂಡ್ಕೂರು ಗ್ರಾಮದ ಸಂಕಲಕರಿಯ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕೆಎ-19-ಎಎಫ್-2515 ನೋಂದಣಿ ಸಂಖ್ಯೆಯ ಟಾಟಾ ಪಿಕಪ್ ವಾಹನದಲ್ಲಿ ಒಂದು ಗಂಡು ಹಾಗೂ ಎರಡು ಹೆಣ್ಣು ಜಾನುವಾರುಗಳನ್ನು ಹಗ್ಗಗಳಿಂದ ಕಟ್ಟಿ ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಪೊಲೀಸರು ವಾಹನ, ಮೂರು ಜಾನುವಾರುಗಳು ಹಾಗೂ ಮೂರು ಹಗ್ಗಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




