ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿರೋಣಿ ಅಂಬೇಡ್ಕರ್ ಕಾಲೋನಿಯಲ್ಲಿ ವಾಸಿಸುವ ಕೊರಗ ಸಮುದಾಯದ ಮನೆಗಳಿಗೆ ಮೂಲಭೂತ ಸೌಕರ್ಯವಾದ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿರುವುದು ಬೆಳಕಿಗೆ ಬಂದಿದೆ.
ಕಾಲೋನಿಯ ಸಮೀಪದಲ್ಲಿರುವ ಸರ್ಕಾರಿ ಸಾರ್ವಜನಿಕ ಬಾವಿಯನ್ನು ಇತ್ತೀಚೆಗೆ ದುರಸ್ತಿ ಮಾಡಲು ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಗುತ್ತಿಗೆದಾರರು ಕೆಲಸವನ್ನು ಅರ್ಧದಲ್ಲೇ ನಿಲ್ಲಿಸಿದ್ದರಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಾಲೋನಿಯ ನಿವಾಸಿ ಸುಪ್ರೀತಾ ಅವರು ಮಾತನಾಡಿ, “ಕೆಲವು ದಿನಗಳ ಹಿಂದೆ ಬಾವಿಯ ದುರಸ್ತಿ ಆರಂಭವಾದರೂ ಅಚಾನಕ್ ಕೆಲಸ ಸ್ಥಗಿತಗೊಂಡಿದೆ. ಇದರಿಂದ ಮನೆಗಳಿಗೆ ಕುಡಿಯುವ ನೀರೇ ಸಿಗದೆ ನಾವು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದೇವೆ” ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಮನೆಯಲ್ಲಿ ಮಹಿಳೆಯರು ಹಾಗೂ ಸಣ್ಣ ಮಕ್ಕಳಿರುವ ಕಾರಣ ದಿನನಿತ್ಯದ ಅಗತ್ಯಗಳಿಗೆ ಸಹ ನೀರು ಸಿಗದೆ ಕುಟುಂಬಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಗ್ರಾಮ ಪಂಚಾಯತ್‌ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಪಂಚಾಯತ್ ಆಡಳಿತವು ತಕ್ಷಣ ಎಚ್ಚೆತ್ತುಕೊಂಡು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಸ್ಥಗಿತಗೊಂಡಿರುವ ಬಾವಿ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು. ಇಲ್ಲವಾದರೆ ಪಂಚಾಯತ್ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.



