ಉಡುಪಿ : ಕಲೆಗಳು ಜನರ ಮನಸ್ಸನ್ನು ಅರಳಿಸುವುದರೊಂದಿಗೆ ಸಂಸ್ಕಾರವಂತರನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಉಡುಪಿ ಪರಿಸರ ಹಾಗೂ ಶ್ರೀಕೃಷ್ಣನ ಸಾನಿಧ್ಯ ಕಲಾರಾಧನೆಗೆ ಹೆಸರುವಾಸಿಯಾಗಿದ್ದು, ಇಂದ್ರಾಳಿಯ ಯಕ್ಷಗಾನ ಕೇಂದ್ರವು ಕಳೆದ ಐದು ದಶಕಗಳಿಂದ ನಿರಂತರವಾಗಿ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದು ಎಂ. ಜಿ. ಎಂ. ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಪೈ ಹೇಳಿದರು.
ಉಡುಪಿ ಯಕ್ಷಗಾನ ಕೇಂದ್ರ, ಇಂದ್ರಾಳಿ ಹಾಗೂ ಎಂ. ಜಿ. ಎಂ. ಕಾಲೇಜಿನ ಯಕ್ಷಗಾನ ಮತ್ತು ನಾಟಕ ರಂಗ ಹಾಗೂ ಐಕ್ಯೂಎಸಿ ವತಿಯಿಂದ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟಿಸಿ ಅವರು ಮಾತನಾಡಿದರು.
ಎಂ. ಜಿ. ಎಂ. ಕಾಲೇಜು ಆವರಣವು ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಇಂತಹ ಸಂಸ್ಥೆಯಲ್ಲಿ ಯಕ್ಷಗಾನ ಕಲೆಗೆ ಅಕಾಡೆಮಿಕ್ ಸ್ವರೂಪ ನೀಡಿ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ವಿದ್ಯಾರ್ಜನೆಯೊಂದಿಗೆ ಈ ತರಬೇತಿಯ ಸದುಪಯೋಗ ಪಡೆದುಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಯಕ್ಷಗಾನ ಕೇಂದ್ರ, ಇಂದ್ರಾಳಿ, ಉಡುಪಿಯ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ, ಯಕ್ಷಗುರು ಕೃಷ್ಣಮೂರ್ತಿ ಭಟ್ ಬಗ್ವಾಡಿ ಹಾಗೂ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಪ್ರೊ. ಶೈಲಜಾ ಉಪಸ್ಥಿತರಿದ್ದರು.
ಯಕ್ಷಗಾನ ಮತ್ತು ನಾಟಕ ರಂಗದ ಸಂಯೋಜಕ ರಾಘವೇಂದ್ರ ತುಂಗ ಕೆ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಹಸಂಯೋಜಕ ಶ್ರೀಧರ ರಾವ್ ಸಹಕರಿಸಿದರು.




