Home Latest ಜನರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ : ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್…!!

ಜನರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ : ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್…!!

ಉಡುಪಿ : ಜನರು ಅರ್ಜಿಗಳನ್ನು ಹಿಡುದುಕೊಂಡು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಮತ್ತು ಕಾಲಮಿತಿಯಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸಲಾಗಿದೆ. ಜನರ ಸೇವೆ ಸರ್ಕಾರದ ಕರ್ತವ್ಯ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಪ್ರಜಾಸೇವಾ ಇಲಾಖೆ ಸಹಯೋಗದಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಹಾಗೂ ಜನರ ನಡುವಿನ ಸಂಬಂಧ ಯಾವಾಗಲು ಗಟ್ಟಿಯಾಗಿರಬೇಕು. ಪ್ರಜಾಸೇವೆ ಇಲಾಖೆಯ ಮೂಲಕ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ.

ಆಯಾ ಜಿಲ್ಲೆಯ ಉಸ್ತುವಾರಿ ಮಂತ್ರಿಗಳು ಒಂದನೇ ಹಾಗೂ ಮೂರನೇ ಶನಿವಾರ ತಾಲೂಕು ಮಟ್ಟದಲ್ಲಿ ಹಾಗೂ ಶಾಸಕರು ಎರಡು ಮತ್ತು ನಾಲ್ಕನೇ ಶನಿವಾರ ಹೋಬಳಿ ಮಟ್ಟದಲ್ಲಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಿದ್ದಾರೆ.

ಪ್ರತಿ ಬುಧವಾರ ಜಿಲ್ಲಾಧಿಕಾರಿಗಳು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅರ್ಜಿಗಳನ್ನು ಫಾಲೋಆಪ್ ಮಾಡಲಿದ್ದಾರೆ ಎಂದರು.

ಉಡುಪಿ ಪ್ರಜ್ಞಾವಂತರ ಜಿಲ್ಲೆ ಎಂದು ಹೆಸರು ಪಡೆದಿದೆ. ಕರಾವಳಿ ಭಾಗದ ಅಭಿವೃದ್ಧಿಯ ಉದ್ದೇಶದಿಂದ ಸೆ. 18 ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಈ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ, ವ್ಯವಹಾರ ಕ್ಷೇತ್ರ, ಉದ್ಯೋಗಾವಕಾಶ ಸೇರಿದಂತೆ ಒಟ್ಟಾರೆಯಾಗಿ ಕರಾವಳಿ ಭಾಗದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಪ್ರತಿಯೊಂದು ಇಲಾಖೆಗೂ ಚುರುಕು ಮುಟ್ಟಿಸಿ, ಅಧಿಕಾರಿಗಳ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ನೆನಪಿಸಲು ಈ ಪ್ರಜಾಸೇವೆ ಆಂದೋಲನ ಸಭೆಯು ಹೆಚ್ಚು ಪರಿಣಾಮಕಾರಿಯಾಗಲಿದೆ. ಉಡುಪಿ ವಿಭಿನ್ನವಾದ ಜಿಲ್ಲೆಯಾಗಿದ್ದು, ಶೈಕ್ಷಣಿಕ, ಆರೋಗ್ಯ, ಧಾರ್ಮಿಕ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದೆ.

ಶೈಕ್ಷಣಿಕವಾಗಿ ರಾಜ್ಯಕ್ಕೇ ಮಾದರಿಯಾಗಿರುವ ಉಡುಪಿ ಜಿಲ್ಲೆಗೆ ಅತೀ ಹೆಚ್ಚು ಅನುದಾನ ನೀಡುವ ಜೊತೆಗೆ ಪ್ರತಿ ಇಲಾಖೆಗಳ ವಿಶೇಷ ಸಭೆ ಕರೆದು ಅಭಿವೃದ್ಧಿಗೆ ಮುನ್ನುಡಿ ಬರೆಯುವ ಕೆಲಸವಾಗಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತವಿಕವಾಗಿ ಮಾತನಾಡಿದರು. ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿ. ಎಫ್. ಓ ರುಥೇನ್ ಮತ್ತಿತರರು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಸ್ವಾಗತಿಸಿ, ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು. ಈ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕಾ ಇಲಾಖೆ ವತಿಯಿಂದ ಲಾನುಭವಿಗಳಿಗೆ ಸಹಾಯಧನ ಹಾಗೂ ಯಂತ್ರೋಪಕರಣಗಳನ್ನು ಹಸ್ತಾಂತರಿಸಲಾಯಿತು.