ಉಡುಪಿ: ಕರಾವಳಿ ಮತ್ತು ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಸಂಪರ್ಕ ಸೇತು ಆಗಿರುವ ರಾಷ್ಟ್ರೀಯ ಹೆದ್ದಾರಿ 169- ಎ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 42.75 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆಯ ವರೆಗೆ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ. ಅಲ್ಲದೆ, ಪರ್ಕಳದಿಂದ ಉಡುಪಿ ಕರಾವಳಿ ಜಂಕ್ಷನ್ ವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ವತಿಯಿಂದ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಸೇರಿದಂತೆ ಕೆಲವೊಂದು ತಿರುವುಗಳಲ್ಲಿ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಸದರಿ ರಸ್ತೆ ಅಭಿವೃದ್ಧಿಗೆ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆ. ಇದೀಗ ಅನುದಾನ ಬಿಡುಗಡೆಯಾಗಿದ್ದು ಕೂಡಲೇ ಅಭಿವೃದ್ಧಿ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೊಳ್ಳಲಿದೆ. ನಮ್ಮ ಮನೆಗೆ ಸ್ಪಂದಿಸಿ ಅನುದಾನ ಬಿಡುಗಡೆಗೆ ಕ್ರಮವಹಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.



