ಕುಂದಾಪುರ : ಚೌತಿ ಹಬ್ಬದ ಹಿನ್ನೆಲೆಯಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿದ್ದ 75 ವರ್ಷದ ಮುತ್ತು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಸೆಪ್ಟೆಂಬರ್ 14ರಂದು ಬೆಳಗ್ಗೆ ಸುಮಾರು 10.30ರ ವೇಳೆಗೆ ಮುತ್ತು ಅವರು ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ತೆರಳಿದ್ದರು. ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ಪ್ರದಕ್ಷಿಣೆ ಬರುತ್ತಿದ್ದ ವೇಳೆ, ಕುತ್ತಿಗೆಯಲ್ಲಿದ್ದ ಸುಮಾರು 22 ಗ್ರಾಂ ತೂಕದ ಚಿನ್ನದ ಸರವನ್ನು ಅಪರಿಚಿತ ಮಹಿಳೆಯರ ತಂಡ ಎಳೆದುಕೊಂಡು ಪರಾರಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಳವಾದ ಚಿನ್ನದ ಸರದ ಅಂದಾಜು ಮೌಲ್ಯ ಸುಮಾರು 2.50 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.
ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


