Home Latest ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ : ಡಿಕೆಶಿ ಐತಿಹಾಸಿಕ ಘೋಷಣೆ…!!

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ : ಡಿಕೆಶಿ ಐತಿಹಾಸಿಕ ಘೋಷಣೆ…!!

ಮಂಗಳೂರು: ಕರಾವಳಿಯ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಸುಮಾರು ಮೂರು ಗಂಟೆಗಳ ಕಾಲ ನಡೆಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿರ್ಧಾರವನ್ನು ಸಂಪುಟ ಕೈಗೊಂಡಿದೆ ಎಂದು ತಿಳಿಸಿದರು.

“ಹಿಂದಿನ ಸರ್ಕಾರಗಳು ಯಾಕೆ ಮಾಡಲಿಲ್ಲ ಎಂದು ನಾನು ಪ್ರಶ್ನಿಸುವುದಿಲ್ಲ. ನಮಗೆ ಬದ್ಧತೆ ಇದೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ” ಎಂದು ಶಿವಕುಮಾರ್ ಹೇಳಿದರು.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಬೇಡಿಕೆಯನ್ನು ವಿಧಾನಸಭೆಯಲ್ಲಿ ಮೊದಲ ಬಾರಿಗೆ ಪ್ರಸ್ತಾಪಿಸಿದವರಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರೂ ಒಬ್ಬರು ಎಂದು ಸಿಎಂ ಉಲ್ಲೇಖಿಸಿದರು. ಈ ಬೇಡಿಕೆಗಾಗಿ ಧ್ವನಿ ಎತ್ತಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಕರಾವಳಿ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ತುಳುವನ್ನು ಮಾತೃಭಾಷೆಯಾಗಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಪುಟದ ನಿರ್ಧಾರಕ್ಕೆ ವಿಶೇಷ ಮಹತ್ವ ದೊರೆತಿದೆ.