ಮಣಿಪಾಲ : ಇಂದ್ರಾಳಿ ರೈಲ್ವೆ ನಿಲ್ದಾಣದ ರನ್ನಿಂಗ್ ಲೈನ್ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಛಿದ್ರಗೊಂಡ ಮೃತದೇಹ ಪತ್ತೆಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯ ಗುರುತು ಹಾಗೂ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮೃತಪಟ್ಟಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸ್ ಠಾಣೆಯ ಎಎಸ್‌ಐ ಶೀನಾ, ಮುಖ್ಯ ಆರಕ್ಷಕ ಚೇತನ್ ಹಾಗೂ ರೈಲ್ವೆ ಇನ್ಸ್‌ಪೆಕ್ಟರ್ ಸಂಜಯ್ ವಾಡ್ಸ್ ಭೇಟಿ ನೀಡಿ ಕಾನೂನು ಪ್ರಕ್ರಿಯೆ ನಡೆಸಿದರು.
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಸ್ಥಳದಿಂದ ತೆರವುಗೊಳಿಸಿ, ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಮೃತ ವ್ಯಕ್ತಿಯ ವಾರಸುದಾರರು ತುರ್ತಾಗಿ ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.





