ಉಡುಪಿ: ಹಲವು ವರ್ಷದಿಂದ ಕಾಂಗ್ರೆಸ್ನಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದ ವಿವಿಧ ಮುಂಖಡರು ಭಾರತೀಯ ಜನತಾ ಪಾರ್ಟಿಯ ತತ್ತ್ವ ಸಿದ್ಧಾಂತ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಅಭಿವೃದ್ಧಿಪರ, ಜನಪರ ಆಡಳಿತದ ಕಾರ್ಯ ವೈಖರಿ ಮೆಚ್ಚಿ ಬಿಜೆಪಿ ಸೇರ್ಪಡೆಗೊಂಡರು.
ಉಡುಪಿ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹಾಗೂ ಶಾಸಕ ಯಶ್ಪಾಲ್ ಸುವರ್ಣ ಅವರು ಪಕ್ಷದ ಧ್ವಜ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಐದು ಬಾರಿ ಚಾಂತಾರು ಗ್ರಾಪಂನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಹಾಗೂ ಒಂದು ಬಾರಿ ಅಧ್ಯಕ್ಷರಾಗಿದ್ದ ಮಹೇಶ್ ಮೊಯ್ಲಿ ಬ್ರಹ್ಮಾವರ, ಉಪ್ಪೂರು ಗ್ರಾಪಂನಲ್ಲಿ ಎರಡು ಬಾರಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಹಾಗೂ ಒಂದು ಬಾರಿ ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದ ಪ್ರಕಾಶ್ ದೇವಾಡಿಗ ಉಪ್ಪೂರು, ಉದ್ಯಮಿ ಅರುಣ್ ಪೂಜಾರಿ ಉಪ್ಪೂರು ಬಿಜೆಪಿ ಸೇರ್ಪಡೆಗೊಂಡ ಪ್ರಮುಖರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ್ ಕುಲಾಲ್, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಬೈಲೂರು, ಪ್ರತಾಪ್ ಹೆಗ್ಡೆ ಮಾರಾಳಿ, ನಳಿನಿ ಪ್ರದೀಪ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ್ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಉಮೇಶ್ ನಾಯ್ಕ್ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ಧೀರಜ್ ಇನ್ನಿತರರಿದ್ದರು.



