Home Crime ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು…!!

ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು…!!

ರಾಯಚೂರು:‌ ನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಸಂಭವಿಸಿದೆ

ಮೃತರನ್ನು ಸುಚಿತ್(14) ಹಾಗೂ ಚರಣಕುಮಾರ್(16) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವಿಜಯಕುಮಾರ್(36) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಜಹಿರಾಬಾದ್‌ನಿಂದ ನಗರದ ಖಾಸಬಾವಿಗೆ ಗಣೇಶ ವಿಸರ್ಜನೆಗಾಗಿ ಮೆರವಣಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೆರವಣಿಗೆಯಲ್ಲಿದ್ದ ಟ್ರ್ಯಾಕ್ಟರ್ ಚಾಲಕ ಬ್ರೇಕ್ ಹಾಕುವ ಬದಲು ಆಕ್ಸಿಲರೇಟರ್ ಒತ್ತಿದ ಪರಿಣಾಮ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಜನರ ಮೇಲೆ ಹರಿದಿದೆ ಎನ್ನಲಾಗಿದೆ.

ಕ್ಷಣಾರ್ಧದಲ್ಲಿ ಸಂಭವಿಸಿದ ದುರಂತದಲ್ಲಿ ಇಬ್ಬರು ಬಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮೆರವಣಿಗೆಯಲ್ಲಿದ್ದವರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು.

ಘಟನೆಯು ರಾಯಚೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.