ಉಪ್ಪಿನಂಗಡಿ: ಕೌಟುಂಬಿಕ ಕಲಹದಿಂದ ಕೋಪಗೊಂಡ ಮಹಿಳೆಯೋರ್ವಳು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಎಂಬಲ್ಲಿ ಮಧ್ಯಾಹ್ನ ಸಂಭವಿಸಿದೆ.
ಘಟನೆಯಲ್ಲಿ ಓರ್ವ ಮಗು ಮೃತಪಟ್ಟಿದ್ದು, ಇನ್ನೋರ್ವ ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲ್ಲಿನ ನಿವಾಸಿ ಸಿನಾನ್ (32) ಹಾಗೂ ಆತನ ಪತ್ನಿ ನೂರುನ್ನಿಸಾ (28) ಎಂಬವರ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದೆ.
ಈ ಸಂದರ್ಭ ಕೋಪಗೊಂಡ ಪತ್ನಿ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಮೂರುವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ.
ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ ಮಕ್ಕಳನ್ನು ಮೇಲಕ್ಕೆ ಎತ್ತಿದ್ದಾರೆ. ಆದರೆ ಈ ವೇಳೆ ಪತಿಯ ತಂಗಿಯ ಮಗು ಮೃತಪಟ್ಟಿದ್ದು, ಆರೋಪಿತೆಯ ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



