Home Crime ಬಂಟ್ವಾಳ: ಅಕ್ರಮ ಮರಳುಗಾರಿಕೆ : 3 ಟಿಪ್ಪರ್, ಜೆಸಿಬಿ ಸಹಿತ ₹25.24 ಲಕ್ಷ ಮೌಲ್ಯದ ಸೊತ್ತು...

ಬಂಟ್ವಾಳ: ಅಕ್ರಮ ಮರಳುಗಾರಿಕೆ : 3 ಟಿಪ್ಪರ್, ಜೆಸಿಬಿ ಸಹಿತ ₹25.24 ಲಕ್ಷ ಮೌಲ್ಯದ ಸೊತ್ತು ವಶ…!!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಲಾರಿಗಳಲ್ಲಿ ತುಂಬಿಸುತ್ತಿದ್ದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂರು ಟಿಪ್ಪರ್ ಲಾರಿ ಹಾಗೂ ಒಂದು ಜೆಸಿಬಿ ಸಹಿತ ಸುಮಾರು ₹25.24 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಸೆ.25ರಂದು ಮುಂಜಾನೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಲಾರಿಗಳಿಗೆ ತುಂಬಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಮಾಹಿತಿ ಆಧರಿಸಿ ಪೊಲೀಸ್ ಉಪನಿರೀಕ್ಷಕ ರನ್ನಗೌಡ ಪಾಟೀಲ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೂರು ಟಿಪ್ಪರ್ ಲಾರಿ ಹಾಗೂ ಒಂದು ಜೆಸಿಬಿ ಪತ್ತೆಯಾಗಿವೆ. ಸ್ಥಳದಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದು, ಮರಳು ತುಂಬಿದ್ದ KA-06-D-8454, KA-19-AF-9094 ಮತ್ತು KA-19-AB-1508 ನೋಂದಣಿ ಸಂಖ್ಯೆಯ ಟಿಪ್ಪರ್ ಲಾರಿಗಳು ಹಾಗೂ KA-20-N-7175 ನೋಂದಣಿ ಸಂಖ್ಯೆಯ ಜೆಸಿಬಿಯನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಇದರೊಂದಿಗೆ ಸುಮಾರು ಎರಡು ಲೋಡ್ ಮರಳು ಹಾಗೂ ಮರಳು ಲೋಡ್ ಮಾಡಲು ಬಳಸುತ್ತಿದ್ದ ಸಾಮಗ್ರಿಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹25,24,700 ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ಯಾವುದೇ ಅನುಮತಿ ಇಲ್ಲದೆ ನದಿ ಕಿನಾರೆಯಿಂದ ಮರಳು ಸಂಗ್ರಹಿಸಿ ಲಾರಿಗಳಿಗೆ ತುಂಬಿಸಿ ಸಾಗಿಸುತ್ತಿರುವುದಾಗಿ ಆರೋಪಿಗಳು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ನಿಹಾನ್, ರಾಜೀಕ್, ಮೊಹಮ್ಮದ್ ಶಂಶೀರ್, ಮಹಮ್ಮದ್ ಅಶ್ರಫ್, ಸ್ಟೀವನ್ ಡಿಸೋಜಾ, ಕೃತ್ಯಕ್ಕೆ ಸಹಕರಿಸಿದ ರೈಟರ್ ಶಿವಪ್ರಸಾದ್ ಆಳ್ವ ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 129/2026ರಂತೆ ಪ್ರಕರಣ ದಾಖಲಾಗಿದೆ.