ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಸಾಲದ ಬಾಧೆ ಹಾಗೂ ಅನಾರೋಗ್ಯದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಂಕನಿಡಿಯೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಉದಯ (50) ಎಂದು ಗುರುತಿಸಲಾಗಿದೆ. ಇವರು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಕೆಲಸದ ನಿಮಿತ್ತ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಕಳೆದ ಸುಮಾರು 10 ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಅವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇತ್ತೀಚೆಗೆ ಸಕ್ಕರೆ ಕಾಯಿಲೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಸರಿಯಾಗಿ ಕೆಲಸಕ್ಕೆ ಹೋಗಲಾಗದೆ ಮನೆಯಲ್ಲಿಯೇ ಇರುತ್ತಿದ್ದರು. ಇದೇ ವಿಚಾರದಲ್ಲಿ ಮನನೊಂದು ಅಕ್ಟೋಬರ್ 3ರಂದು ಸಂಜೆ 4ರಿಂದ 5 ಗಂಟೆಯ ನಡುವಿನ ಅವಧಿಯಲ್ಲಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



