ಮಂಗಳೂರು : ನಗರದಲ್ಲಿ ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿ, ಬಳಿಕ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ತಿಳಿದು ಬಂದಿದೆ.
2010ರ ಜೂನ್ 22ರಂದು ವೇಲಾಯುಧನ್ ನಕಲಿ ಪಾಸ್‌ಪೋರ್ಟ್ ಪಡೆದು ಬಜ್ಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸಿದ್ದ. ಈ ಸಂದರ್ಭ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜ್ಪೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು ಎಂದು ತಿಳಿದು ಬಂದಿದೆ.
ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ವೇಲಾಯುಧನ್‌ಗೆ 1 ವರ್ಷ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ತೀರ್ಪಿನ ವಿರುದ್ಧ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ಗೆ ಕ್ರಿಮಿನಲ್ ರಿವಿಷನ್ ಪಿಟಿಷನ್ ನಂ. 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಮನವಿಯನ್ನು ತಿರಸ್ಕರಿಸಿತ್ತು.
ಇದಾದ ಬಳಿಕ ಬಂಧನದಿಂದ ತಪ್ಪಿಸಿಕೊಂಡು 2020ರಿಂದ ತಲೆಮರೆಸಿಕೊಂಡಿದ್ದ ವೇಲಾಯುಧನ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ಇದೀಗ ಅ. 8, 2026ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.
ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.



