Home Dskshina Kannada ಶ್ರೀ ಮಹಾವೀರ ಕಾಲೇಜಿನಲ್ಲಿ ಎಐ-ಕೋಡಿಂಗ್ ಶಿಬಿರ ಮತ್ತು ಎಐ ಕಾರ್ಯಾಗಾರ..!!

ಶ್ರೀ ಮಹಾವೀರ ಕಾಲೇಜಿನಲ್ಲಿ ಎಐ-ಕೋಡಿಂಗ್ ಶಿಬಿರ ಮತ್ತು ಎಐ ಕಾರ್ಯಾಗಾರ..!!

ಮೂಡುಬಿದಿರೆ: ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಕೃತಕ ಬುದ್ಧಿಮತ್ತೆ ಮತ್ತು ಕೋಡಿಂಗ್ ಕ್ಲಬ್ ಸಹಯೋಗದಲ್ಲಿ ಪ್ರೌಢಶಾಲೆ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 12ರಿಂದ 17ರವರೆಗೆ ಪ್ರೌಢಶಾಲೆ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಕೃತಕ ಬುದ್ಧಿಮತ್ತೆ ಮತ್ತು ಕೋಡಿಂಗ್ ಶಿಬಿರ ನಡೆಯಲಿದ್ದು, ಸುಮಾರು 125 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಈ ಕಾರ್ಯಕ್ರಮದ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ, ಕೋಡಿಂಗ್ ಹಾಗೂ ಸೈಬ‌ರ್ ಭದ್ರತೆ ಸೇರಿದಂತೆ ಹೊಸ ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಪ್ರಾಯೋಗಿಕ ಕಲಿಕೆಗೆ ಅವಕಾಶ ನೀಡುವುದು ಮತ್ತು ಮುಂದಿನ ಶಿಕ್ಷಣ ಹಾಗೂ ವೃತ್ತಿ ಆಯ್ಕೆಗಳ ಬಗ್ಗೆ ತಿಳುವಳಿಕೆ ನೀಡುವುದು.

ಶಿಬಿರದ ಕೊನೆಯ ದಿನವಾದ ಅ. 17ರಂದು ಪ್ರೌಢಶಾಲೆ ಹಾಗೂ ಪದವಿಪೂರ್ವ ಶಿಕ್ಷಕರಿಗಾಗಿ “ಬೋಧನೆಯಲ್ಲಿ ಕೃತಕ ಬುದ್ಧಿಮತ್ತೆ” ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಈ ಕಾರ್ಯಾಗಾರದಲ್ಲಿ ಸುಮಾರು 75 ಶಿಕ್ಷಕರು ಭಾಗವಹಿಸುವ ನಿರೀಕ್ಷೆಯಿದೆ. ಶಿಕ್ಷಕರಿಗೆ ಪಾಠ ಯೋಜನೆ, ಪ್ರಶ್ನೋತ್ತರ ಮೌಲ್ಯಮಾಪನ, ಪ್ರಸ್ತುತಿಕೆ ತಯಾರಿ ಹಾಗೂ ಇತರ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

ಅ. 12ರಂದು ನಡೆಯುವ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಅಧ್ಯಕ್ಷ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್‌ನ ಪ್ರೊ. ಚಾನ್ಸಲ‌ರ್ ಡಾ. ಎಚ್. ಎಸ್. ಬಲ್ಲಾಳ್ ಇವರು ಉದ್ಘಾಟಿಸಲಿದ್ದು, ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ರಾಜೇಶ್ವರಿ ಎಚ್. ಎಚ್., ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಎಸ್. ಡಿ. ಸಂಪತ್ ಸಾಮ್ರಾಜ್ಯ ಹಾಗೂ ಮೂಡಬಿದ್ರಿ, ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್. ಎಸ್. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದೆ.