ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57) ಎಂದು ತಿಳಿದು ಬಂದಿದೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೆಇ ಕಾಯ್ದೆಯ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಅಲ್ಲದೇ, 2023ರಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣದಲ್ಲಿಯೂ ಈತನ ವಿರುದ್ಧ ವಾರಂಟ್ ಜಾರಿಯಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅ.9ರಂದು ಮೂಡಬಿದ್ರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಬಶೀರ್ ಹಾಗೂ ಸಿಬ್ಬಂದಿಗಳಾದ ಹೆಡ್ ಕಾನ್‌ಸ್ಟೇಬಲ್ ಜಗದೀಶ್, ಸಂತೋಷ್ ಮತ್ತು ಪೊಲೀಸ್ ಕಾನ್‌ಸ್ಟೇಬಲ್ ಗವಿಸಿದ್ದಪ್ಪ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ



