ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮದ ಹಿರಿಯರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಹಲವಾರು ಮನವಿಗಳು ಸರ್ಕಾರದಲ್ಲಿ ಸ್ವೀಕೃತಗೊಂಡಿದೆ. ಈ ಕುರಿತು ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಗಣನೆಗೆ ತೆಗೆದುಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡಲು ಉದ್ದೇಶಿಸಲಾಗಿದೆ.
ಭಾರತ ಸರ್ಕಾರದ ಗೃಹ ಮಂತ್ರಾಲಯದ ಮಾರ್ಗಸೂಚಿಗಳನ್ವಯ ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಸೆಕ್ಷನ್ 4(4ಂ) ರಡಿ ಪ್ರದತ್ತವಾದ ಅಧಿಕಾರದನ್ವಯ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಸಾರ್ವಜನಿಕರಿಂದ ಯಾವುದೇ ಸಲಹೆ/ಅಭಿಪ್ರಾಯಗಳು ಸ್ವೀಕೃತವಾದಲ್ಲಿ ಅವುಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ/ಸಲಹೆಗಳನ್ನು 1)ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ 235, 2ನೇ ಮಹಡಿ, ವಿಧಾನ ಸೌಧ ಬೆಂಗಳೂರು 560001 ಅಥವಾ 2)ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ಅಥವಾ 3)ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ ಪ್ರಜಾಸೌಧ, ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇಂದ್ರ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಪಡೀಲು, ಮಂಗಳೂರು, -575007- ವಿಳಾಸಗಳಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಈ ಅಧಿಸೂಚನೆಯು ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗಾಗಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.



