Home Crime ಸುಳ್ಯ: ತೋಟಕ್ಕೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು : ಬಾಲಕನಿಗೆ ಗಾಯ…!!

ಸುಳ್ಯ: ತೋಟಕ್ಕೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು : ಬಾಲಕನಿಗೆ ಗಾಯ…!!

ಸುಳ್ಯ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವ್ಯಕ್ತಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ಎಂಬಲ್ಲಿ ಅಕ್ಟೋಬರ್ 12ರಂದು ನಡೆದಿದೆ. ಘಟನೆಯಲ್ಲಿ ಓರ್ವ ಅಪ್ರಾಪ್ತ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೃತರನ್ನು ಕಲ್ಮಡ್ಕದ ಭರತ್ (28) ಹಾಗೂ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ರಮೇಶ್ ಅಲಿಯಾಸ್ ಗಣೇಶ್ (36) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 12ರಂದು ಭರತ್ ಮತ್ತು ರಮೇಶ್ ಅವರು ಅಪ್ರಾಪ್ತ ಬಾಲಕನೊಂದಿಗೆ ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ಎಂಬಲ್ಲಿನ ತೋಡಿನಲ್ಲಿ ಮೀನು ಹಿಡಿಯುತ್ತಾ ಮುಂದೆ ಸಾಗುತ್ತಿದ್ದರು. ಈ ವೇಳೆ ತೋಡಿನ ಪಕ್ಕದಲ್ಲಿದ್ದ ಮಧುಸೂದನ್ ಭಟ್ ಎಂಬವರ ತೋಟದಿಂದ ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ ಎನ್ನಲಾಗಿದೆ.

ಇದನ್ನು ಗಮನಿಸಿದ ಜೊತೆಯಲ್ಲಿದ್ದ ಬಾಲಕ ತನ್ನ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಮೂವರನ್ನೂ ಕೆ.ವಿ.ಜಿ. ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಭರತ್ ಮತ್ತು ರಮೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಗಾಯಗೊಂಡ ಬಾಲಕನನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಧುಸೂದನ್ ಭಟ್ ಅವರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 59/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 105 ಹಾಗೂ ವಿದ್ಯುತ್ ಕಾಯ್ದೆಯ ಕಲಂ 135(1)(E)ರಂತೆ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.