ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ, ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಮಾರ್ಗದರ್ಶನದಲ್ಲಿ ಭಾನುವಾರ (18-10-2026) ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಯಿತು.
ಕೇಂದ್ರ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ದೇಶಾದ್ಯಂತ ವಿವಿಧ ಪಕ್ಷ, ಸಂಘಟನೆಗಳು ಪ್ರತಿಭಟಿಸುತ್ತಿದ್ದು, ಚುನಾವಣಾ ಆಯೋಗ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಅ.23 ಶುಕ್ರವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಸಹಬಾಳ್ವೆ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ಅಜ್ಜರಕಾಡು ಗಾಂಧಿ ಪ್ರತಿಮೆಯಿಂದ ಸರ್ವಿಸ್ ಬಸ್ ನಿಲ್ದಾಣದವರೆಗೆ ಪಾದಯಾತ್ರೆ ನಡೆಸಿ ಸಾರ್ವಜನಿಕ ಸಭೆ ನಡೆಸಲಾಗುವುದು. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಲಾಯಿತು.
ಸಭೆಯಲ್ಲಿ ಭಾರತ್ ಜೋಡೋ ಯುವ ಸಂಘದ ಸದಸ್ಯತ್ವ ಅಭಿಯಾನ ವೇಗಗೊಳಿಸುವ ಬಗ್ಗೆಯೂ ಚರ್ಚೆಯಾಯಿತು. ಅಲ್ಲದೆ ಅ.29 ಗುರುವಾರ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯ ಬಡ ರೋಗಿಗಳ ನೆರವಿಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸುವ ಕುರಿತು ನಿರ್ಧರಿಸಲಾಯಿತು.
ಸಭೆಯಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಸದಸ್ಯ ದಿನೇಶ್ ಪುತ್ರನ್, ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಅಮೃತ್ ಶೆಣೈ ಸೇರಿದಂತೆ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.










