ಉಡುಪಿ: 2028ರ ವಿಧಾನಸಭಾ ಚುನಾವಣೆಯಲ್ಲಿ ಯಾವುದಾದರೂ ಪಕ್ಷದಿಂದ ಸ್ಪರ್ಧಿಸಬೇಕೋ ಅಥವಾ ಪಕ್ಷೇತರನಾಗಿ ಸ್ಪರ್ಧಿಸಬೇಕೋ ಎಂಬ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಬಿಜೆಪಿಗೆ ಮತ್ತೆ ಕರೆದರೆ ಸಂತೋಷದಿಂದ ಹೋಗುತ್ತೇನೆ ಎಂದು ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು ,ಸದ್ಯ ಜನರೊಂದಿಗಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ಈ ಹಿಂದೆ ಮೂರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಬಿಜೆಪಿಯಲ್ಲಿದ್ದಾಗ ಪಕ್ಷದೊಂದಿಗೆ ಸೇರಿ ಚುನಾವಣಾ ತಯಾರಿ ನಡೆಸುತ್ತಿದ್ದೆ. ಆದರೆ, ಸದ್ಯ ಪಕ್ಷೇತರನಾಗಿರುವುದರಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ಚಿಂತನೆ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.
ಚುನಾವಣೆಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಂಡರೆ ಮೊದಲು ಮಾಧ್ಯಮಗಳಿಗೆ ತಿಳಿಸುತ್ತೇನೆ. ಅದಕ್ಕೂ ಮೊದಲು ಅಭಿಮಾನಿಗಳು ಹಾಗೂ ತಮ್ಮೊಂದಿಗೆ ಕೆಲಸ ಮಾಡಿದವರ ಅಭಿಪ್ರಾಯ ಪಡೆಯುತ್ತೇನೆ. ಆದರೆ, ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆಯನ್ನು ಇನ್ನೂ ಆರಂಭಿಸಿಲ್ಲ. ಪಕ್ಷೇತರನಾಗಿ ಸ್ಪರ್ಧಿಸುವುದಾದರೆ ಅಭಿಮಾನಿಗಳು ಮತ್ತು ಬೆಂಬಲಿಗರ ಅಭಿಪ್ರಾಯ ಹಾಗೂ ಚರ್ಚೆಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿ ತೊರೆದು ಹೋದ ನಾಯಕರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸುವ ಕುರಿತು ರಾಜ್ಯಮಟ್ಟದ ನಾಯಕರು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪಕ್ಷದಿಂದ ಯಾವಾಗ ಕರೆ ಬಂದರೂ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಸದ್ಯ ಕಾರ್ಯಕರ್ತರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.



