ಬಂಟ್ವಾಳ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಮೇಲೆ ಪತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ಸುನೀತಾ ಮಹಾದೇವ್ ದೇಸಂಗಿ (34) ಎಂದು ಗುರುತಿಸಲಾಗಿದೆ. ಅವರ ಪತಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಸಂಜೀವಕುಮಾರ್ (36) ಆರೋಪಿಯಾಗಿದ್ದಾರೆ.
ದಂಪತಿಗಳು ಬಂಟ್ವಾಳ ತಾಲೂಕಿನ ವಗ್ಗದಲ್ಲಿ ವಾಸವಾಗಿದ್ದರು. ಇವರ ನಡುವೆ ವೈವಾಹಿಕ ಕಲಹವಿದ್ದು, ಸಂಬಂಧಿಕರು ಮಧ್ಯಸ್ಥಿಕೆ ವಹಿಸಿ ರಾಜಿ ಸಂಧಾನ ನಡೆಸಿದ್ದರು. ಹೆರಿಗೆಯ ಬಳಿಕ ತವರು ಮನೆಯಲ್ಲಿದ್ದ ಸುನೀತಾ ಅವರನ್ನು ಅ.4ರಂದು ಪತಿ ತನ್ನ ಮನೆಗೆ ಕರೆತಂದಿದ್ದ ಎನ್ನಲಾಗಿದೆ.
ಅ.22ರಂದು ಸುನೀತಾ ಅವರು ತಮ್ಮ ಸಹೋದರ ಅರುಣ್ ಮಹಾದೇವ್ ದೇಸಂಗಿ ಅವರಿಗೆ ಕರೆ ಮಾಡಿ, ಪತಿ ಕಿರುಕುಳ ನೀಡುತ್ತಿದ್ದು, ಹಲ್ಲೆ ನಡೆಸುತ್ತಿರುವುದಾಗಿ ತಿಳಿಸಿದ್ದರು. ಮರುದಿನ ಅ.23ರಂದು ಬೆಳಗ್ಗೆ ಸಂಜೀವಕುಮಾರ್ ಅವರು ಕರೆ ಮಾಡಿ ಸುನೀತಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸುತ್ತಿರುವುದಾಗಿ ಮಾಹಿತಿ ನೀಡಿದ್ದರು.
ಬಳಿಕ ಸ್ಥಳಕ್ಕೆ ಆಗಮಿಸಿದ ಅರುಣ್ ಅವರು ಸುನೀತಾ ಮೃತಪಟ್ಟಿರುವುದನ್ನು ಕಂಡಿದ್ದಾರೆ. ಮೃತದೇಹವನ್ನು ಪರಿಶೀಲಿಸಿದಾಗ ಹಲ್ಲೆಯ ಗಾಯಗಳು ಹಾಗೂ ರಕ್ತ ಕಂಡುಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅ.22ರ ರಾತ್ರಿ ಮತ್ತು ಅ.23ರ ಬೆಳಗ್ಗಿನ ನಡುವೆ ಸಂಜೀವಕುಮಾರ್ ಅವರು ಸುನೀತಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಅರುಣ್ ದೂರು ನೀಡಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.



