ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಅಂಗವಿಕಲ ಮಗಳನ್ನು ಕೊಲೆ ಮಾಡಿದ ಬಳಿಕ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಾನಾಡಿ ಮದಗ ಕೊರಗ ಕಾಲೋನಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಶಾನಾಡಿ ನಿವಾಸಿ ಸುಧಾಕರ ಕೊರಗ ಅವರ ಪತ್ನಿ ನೇತ್ರಾವತಿ (40) ಮತ್ತು ಪುತ್ರಿ ಸುಪ್ರತಿ (14) ಎಂದು ಗುರುತಿಸಲಾಗಿದೆ.
ಸುಧಾಕರ ಅವರು ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದರು. ಪುತ್ರಿ ಸುಪ್ರತಿ ಹುಟ್ಟಿನಿಂದಲೇ ಅಂಗವಿಕಲೆಯಾಗಿದ್ದು, ನಡೆಯಲು ಅಥವಾ ಕುಳಿತುಕೊಳ್ಳಲು ಸಾಧ್ಯವಾಗದೇ ಹಾಸಿಗೆಯಲ್ಲೇ ಇರಬೇಕಾದ ಸ್ಥಿತಿಯಲ್ಲಿದ್ದರು. ಅವರ ಆರೈಕೆಯನ್ನು ತಾಯಿ ನೇತ್ರಾವತಿ ಮಾಡುತ್ತಿದ್ದರು. ದಂಪತಿಗೆ ಒಂದು ವರ್ಷದ ಗಂಡು ಮಗುವೂ ಇದೆ.
ಭಾನುವಾರ ಬೆಳಗ್ಗೆ ಸುಧಾಕರ ಅವರು ಕೆಲಸಕ್ಕೆ ತೆರಳಿದ ಬಳಿಕ ಮನೆಯಲ್ಲಿದ್ದ ನೇತ್ರಾವತಿ ಮಗಳ ಕುತ್ತಿಗೆಗೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ, ನಂತರ ತಾವೂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನೆ ಸಂಬಂಧ ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.






