ಕೋಟ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ RSS ಮುಖಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಕೋಟ ಮಣೂರು ನಿವಾಸಿ, ಹಿರಿಯ RSS ಮುಖಂಡ ಗುರುದಾಸ್ ಶೆಣೈ. ಗಾಯಾಳು ಕಾರು ಚಾಲಕ ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಗುರುದಾಸ್ ಶೆಣೈ ಅವರು ಸೈಕಲ್‌ನಲ್ಲಿ ಕೋಟ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಬಂದ ಕಾರು ಸೈಕಲ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗುರುದಾಸ್ ಶೆಣೈ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಅಪಘಾತದಲ್ಲಿ ಕಾರು ಚಾಲಕ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.
ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.








