ಉಡುಪಿ: ನಗರ ಸಮೀಪ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿಯ ಕಿನ್ನಿಮುಲ್ಕಿ ನಿವಾಸಿ ಮಹಮ್ಮದ್ ಪರ್ವೇಜ್ (26) ಎಂದು ಗುರುತಿಸಲಾಗಿದೆ.
ಈತನಿಂದ ಸುಮಾರು 20 ಇಂಚು ಉದ್ದದ ಕಬ್ಬಿಣದ ಲಾಂಗ್ ಹಾಗೂ 16 ಇಂಚು ಉದ್ದದ ಕಬ್ಬಿಣದ ಚಾಕುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅ. 24ರಂದು ಮಣಿಪಾಲ ಪೊಲೀಸ್ ಠಾಣೆಯ ತನಿಖಾ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಇ. ಅವರು ಗಸ್ತಿನಲ್ಲಿದ್ದಾಗ, ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಮಾಹಿತಿ ಲಭಿಸಿತ್ತು.
ತಕ್ಷಣ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಎರಡು ಮಾರಕಾಸ್ತ್ರಗಳು ಪತ್ತೆಯಾಗಿವೆ.
ಆರೋಪಿಯ ವಿರುದ್ಧ ಉಡುಪಿ ನಗರ, ಶಿರ್ವ, ಸೆನ್ ಹಾಗೂ ಮಂಗಳೂರಿನ ಕಾವೂರು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ದಾವೂದ್, ಇಸಾಕ್ ಹಾಗೂ ಗರುಡ ಗ್ಯಾಂಗ್ನ ಕೆಲವರೊಂದಿಗೆ ವೈಮನಸ್ಸು ಹೊಂದಿದ್ದು, ಅವರ ಮೇಲೆ ಹಲ್ಲೆ ನಡೆಸುವ ಉದ್ದೇಶದಿಂದ ಆಯುಧಗಳನ್ನು ಇಟ್ಟುಕೊಂಡಿದ್ದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಅನುಮತಿ ಇಲ್ಲದೆ, ಸೂಕ್ತ ಕಾರಣವಿಲ್ಲದೆ ಮಾರಕಾಸ್ತ್ರಗಳನ್ನು ಹೊಂದಿದ್ದ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 175/2026ರಂತೆ ಶಸ್ತ್ರಾಸ್ತ್ರ ಕಾಯ್ದೆಯ ಕಲಂ 4 ಮತ್ತು 25(1B)(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.





