ಮಂಗಳೂರು: ನಗರದ ಕಂಕನಾಡಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ನಿಲ್ದಾಣದ ಬಳಿ ಮಾದಕ ವಸ್ತುಗಳನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಕಂಕನಾಡಿ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಶಿವಕುಮಾರ್ ಕೆ. ಅವರು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ನಾಗೂರಿ, ಕಪಿತಾನಿಯೋ ಮೊದಲಾದ ಕಡೆಗಳಲ್ಲಿ ಗಸ್ತು ನಡೆಸುತ್ತಿದ್ದರು. ಈ ಸಂದರ್ಭ ರಾತ್ರಿ ಸುಮಾರು 10:50 ಗಂಟೆಗೆ ಪಡೀಲ್ ನಿಲ್ದಾಣದ ಬಳಿ ಯುವಕರು ಮಾದಕ ವಸ್ತುಗಳನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಬದ್ರುದ್ದೀನ್ (36), ರಕ್ಷಿತ್ ಶೆಟ್ಟಿ (38) ಹಾಗೂ ಭವಿತ್ ರಾಜ್ (34) ಎಂಬ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ಮಂಗಳೂರಿನ ಕುಂಟಿಕಾನದಲ್ಲಿರುವ ಎ.ಜೆ. ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ವೈದ್ಯಕೀಯ ಪರೀಕ್ಷೆಯಲ್ಲಿ ಮೂವರು ಆಂಫೆಟಮೈನ್ (Amphetamine), ಮೆಥಾಂಫೆಟಮೈನ್ (Methamphetamine) ಹಾಗೂ ಎಂಡಿಎಂಎ (MDMA) ಮಾದಕ ವಸ್ತುಗಳನ್ನು ಸೇವಿಸಿರುವುದು ದೃಢಪಟ್ಟಿದೆ ಎಂದು ನೀಡಲಾದ ಮಾಹಿತಿಯಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಕಂಕನಾಡಿ ಟೌನ್ ಪೊಲೀಸ್ ಠಾಣೆಯಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ನಡೆದಿದೆ.



