Home Crime ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ರೌಡಿಶೀಟರ್‌ಗೆ 20 ವರ್ಷ ಕಠಿಣ ಜೈಲು ಶಿಕ್ಷೆ…!!

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ರೌಡಿಶೀಟರ್‌ಗೆ 20 ವರ್ಷ ಕಠಿಣ ಜೈಲು ಶಿಕ್ಷೆ…!!

ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ರೌಡಿಶೀಟರ್‌ಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹75 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಸದ್ದಾಂ (34) ಶಿಕ್ಷೆಗೆ ಗುರಿಯಾದ ಅಪರಾಧಿ ಎಂದು ತಿಳಿಯಲಾಗಿದೆ.

ಬಾಲಕಿಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಈತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕೆ. ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಸಮಗ್ರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪುತ್ತೂರು ಪೀಠ) ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ವಿಚಾರಣೆ ನಡೆಸಿ, ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.

ಶಿಕ್ಷೆಯ ವಿವರ:

  • ಪೋಕ್ಸೊ ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ ಒಂದು ವರ್ಷ ಕಠಿಣ ಸಜೆ ಅನುಭವಿಸಬೇಕಾಗುತ್ತದೆ.
  • ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 506ರ (ಜೀವಬೆದರಿಕೆ) ಅಡಿಯಲ್ಲಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಲಾಗಿದ್ದು, ದಂಡ ಕಟ್ಟದಿದ್ದರೆ ಮತ್ತೆ ಒಂದು ವರ್ಷ ಶಿಕ್ಷೆ ವಿಧಿಸಲಾಗಿದೆ. ಈ ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ ಎಂದು ನ್ಯಾಯಾಲಯ ಆದೇಶಿಸಿದೆ.

ಶಿಕ್ಷೆಗೆ ಒಳಗಾದ ಸದ್ದಾಂ ಕಡಬ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಈ ಹಿಂದೆಯೇ ಕಡಬ ಪೊಲೀಸ್ ಠಾಣೆಯಲ್ಲಿ 4 ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿರುವುದು ವಿಚಾರಣೆ ವೇಳೆ ದೃಢಪಟ್ಟಿದೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡಂತಾಯ ಅವರು ವಾದ ಮಂಡಿಸಿದ್ದರು.