ಬ್ರಹ್ಮಾವರ: ಇಲಿ ಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಉಮೇಶ್ ಪೂಜಾರಿ (53) ಮೃತಪಟ್ಟವರು ಎಂದು ತಿಳಿಯಲಾಗಿದೆ.
ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಇದೇ ಕಾರಣದಿಂದಲೋ ಅಥವಾ ಇನ್ಯಾವುದೋ ಕಾರಣದಿಂದಲೋ ಅಕ್ಟೋಬರ್ 27ರಂದು ಸಂಜೆ 5:30ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಲಿ ಪಾಷಾಣ ಸೇವಿಸಿದ್ದರು ಎನ್ನಲಾಗಿದೆ.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಪೂಜಾರಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನವೆಂಬರ್ 1ರಂದು ಬೆಳಗಿನ ಜಾವ 6:10ಕ್ಕೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



